ಎಂ.ಕೆ.ಹುಬ್ಬಳ್ಳಿಯಲ್ಲಿ ಕೆರೆ ಪಾಲಾದ ಇಬ್ಬರು
ಬೆಳಗಾವಿ: ಕಿತ್ತೂರಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದ ಹೊರವಲಯದಲ್ಲಿ ಆಕಸ್ಮಿಕವಾಗಿ ಕೆರೆಯಲ್ಲಿ ಕಾಲು ಜಾರಿಬಿದ್ದ ಪರಿಣಾಮದಿಂದ ಇಬ್ಬರು ಬಲಿಯಾಗಿದ್ದಾರೆ.
ಇಂದು ಮುಂಜಾನೆ ಬಹಿರ್ದೆಸೆಗೆ ಕೆರೆ ಕಡೆ ತೆರಳಿದ್ದ ಇಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಯ ನೀರಿಗೆ ಜಾರಿದ್ದಾರೆ. ಈಜು ಬಾರದ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ ಎಂದು ವರದಿಯಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಒಬ್ಬರ ಶವವನ್ನು ನೀರಿನಿಂದ ಹೊರತೆಗೆಯಲಾಗಿದ್ದು, ಗೋಕಾಕ ತಾಲ್ಲೂಕಿನ ಕೊಣ್ಣೂರು ಗ್ರಾಮದ ಕಾಂತೇಶ ಬಡಿಗೇರ (25) ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಕಿತ್ತೂರು ಠಾಣೆ ಪಿಎಸ್ಐ ದೇವರಾಜ್ ಉಳ್ಳಾಗಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.